ಬೆಂಗಳೂರು: 2 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚಿಸಿ, ರಾಜಕಾಲುವೆ ಹೂಳೆತ್ತಿಸಿ; ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ಎರಡು ತಿಂಗಳಿನಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪೂರ್ಣಗೊಳಿಸಬೇಕು ಹಾಗೂ ರಾಜಕಾಲುವೆಗಳನ್ನು ಹೂಳೆತ್ತಿಸಿ, ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿ ಸಭೆ ನಡೆಯಿತು. ರಸ್ತೆಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು, ಮಾರ್ಚ್ ಒಳಗೆ ಕಾರ್ಯ ಪೂರ್ಣ ಗೊಂಡಿರಬೇಕು. ರಸ್ತೆ ದುರಸ್ತಿ ಕಾಮಗಾರಿ ತುಂಬಾ ಕಳಪೆಯಾಗಿವೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಶೇ. 40ರಷ್ಟು ಕಮಿಷನ್ ಪಡೆಯಲಾಗುತ್ತದೆ ಎಂಬ ಅಪವಾದ ಕೇಳಿಬರುತ್ತಿದೆ. ಇದೆಲ್ಲ ಆಗಬಾರದು. ಆದಷ್ಟು ಬೇಗ ಗುಂಡಿಗಳನ್ನು ಮುಚ್ಚಿಸಿ ಎಂದು ಸಿಎಂ, ಅಧಿಕಾರಿಗಳಿಗೆ ತಾಕೀತು ಮಾಡಿದರು. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕೆಲಸ ಮಾಡಬೇಕು. ತಮ್ಮ ಕ್ಷೇತ್ರದಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕರಿಗೆ ಸಿಎಂ ಸೂಚಿಸಿದರು. ಕೋವಿಡ್ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಎಸ್.ಟಿ. ಸೋಮಶೇಖರ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.