ಧಾರವಾಡ ಜಿಲ್ಲೆಯ 20 ಸ್ಥಳಗಳಲ್ಲಿ ಹೆಸರು ಖರೀದಿ ಕೇಂದ್ರ ಆರಂಭ
ಧಾರವಾಡ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರ ಮಾರಾಟಕ್ಕೆ ಅನುಕೂಲವಾಗುವಂತೆ ಧಾರವಾಡ ಜಿಲ್ಲೆಯ 20 ಸ್ಥಳಗಳಲ್ಲಿ ಸರ್ಕಾರದ ಆದೇಶ ದಿನಾಂಕದಿಂದ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ 8682 ರೂಪಾಯಿ ದರದಂತೆ ಪ್ರತಿ ರೈತನಿಂದ ಗರಿಷ್ಠ 10 ಕ್ವಿಂಟಾಲ್ ಹೆಸರು ಕಾಳು ಉತ್ಪನ್ನವನ್ನು ನೇರವಾಗಿ ಖರೀದಿ ಮಾಡಲಾಗುತ್ತದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಜರುಗಿಸಿ ಮಾತನಾಡಿದ ಅವರು, ಹೆಸರು ಕಾಳು ಉತ್ಪನ್ನ ಖರೀದಿಗಳನ್ನು ಆರಂಭಿಸುವ ಕುರಿತು ಚರ್ಚಿಸಿ, ನಿರ್ದೇಶನ ನೀಡಿದರು.
ಪ್ರಸಕ್ತ ವರ್ಷ ಮುಂಗಾರಿನಲ್ಲಿ ಜಿಲ್ಲೆಯ ಸುಮಾರು 1 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಹೆಸರು ಕಾಳು ಬಿತ್ತನೆ ಆಗಿದೆ. ನವಲಗುಂದ ತಾಲೂಕಿನಲ್ಲಿ 38 ಸಾವಿರ ಹೆಕ್ಟೇರ್, ಅಣ್ಣಿಗೇರಿ ತಾಲೂಕಿನಲ್ಲಿ ಸುಮಾರು 19 ಸಾವಿರ ಹೆಕ್ಟೇರ್, ಧಾರವಾಡ ತಾಲೂಕಿನಲ್ಲಿ 10 ಸಾವಿರ ಹೆಕ್ಟೇರ್, ಹುಬ್ಬಳ್ಳಿ ತಾಲೂಕಿನಲ್ಲಿ 12 ಸಾವಿರ ಹೆಕ್ಟೇರ್ ಮತ್ತು ಕುಂದಗೋಳ ತಾಲೂಕಿನಲ್ಲಿ 19 ಸಾವಿರ ಹೆಕ್ಟೇರ್ ಭೂ ಪ್ರದೇಶದಲ್ಲಿ ಹೆಸರು ಬಿತ್ತನೆ ಆಗಿದೆ. ಅಂದಾಜು 1 ಲಕ್ಷ ಕ್ವಿಂಟಲ್ ಹೆಸರು ರೈತರಿಗೆ ತೊಂದರೆ ಆಗದಂತೆ ನಿಯಮಾನುಸಾರ ರೈತರಿಂದ ನೇರವಾಗಿ ಉತ್ಪನ್ನ ಖರೀದಿಸಬೇಕು. ರೈತರಿಗೆ ತೊಂದರೆ ಆಗದಂತೆ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು.
ರೈತರಿಂದಲೇ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಹೆಸರು ಕಾಳು ಉತ್ಪನ್ನವನ್ನು ಖರೀದಿಸುವುದರಿಂದ ಮಧ್ಯವರ್ತಿಗಳಿಗೆ ಅವಕಾಶವಿಲ್ಲ. 2024-25 ನೇ ಸಾಲಿನ ಮುಂಗಾರು ಹಂಗಾಮಿನ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಉತ್ಪನ್ನವನ್ನು ಖರೀದಿಸಲು ನಾಫೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ, ಕಲಬುರಗಿ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ಗುರುತಿಸಲಾಗಿದೆ ಎಂದು ಅವರು ಹೇಳಿದರು.
ಪ್ರತಿ ರೈತರಿಂದ ಹೆಸರು ಕಾಳನ್ನು ಪ್ರತಿ ಎಕರೆಗೆ 02 ಕ್ವಿಂಟಾಲ್‌ನಂತೆ ಗರಿಷ್ಟ 10 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ. ಖರೀದಿ ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ, ಬಯೋಮೇಟ್ರಿಕ್ ಮೂಲಕ ಹೆಸರುಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ನೊಂದಾಯಿಸಲು ಬಳಸಕ್ಕದ್ದು, ಹಾಗೂ NIC ಸಂಸ್ಥೆಯು ಅಭಿವೃದ್ಧಿಪಡಿಸಿರುವ ಸದರಿ ನೋಂದಣಿ ತಂತ್ರಾಂಶವು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ ಎಂದರು.