ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ನಿರ್ಧಾರ : ನಿವೃತ್ತಿ ವೇಳೆ ಸಿಗಲಿದೆ 5 ಲಕ್ಷ ಹಣ
ಬೆಂಗಳೂರು: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಅತಿಥಿ ಉಪನ್ಯಾಸಕರಿಗೆ ಸಮಾಧಾನಕರ ಸುದ್ದಿ ಕೊಟ್ಟಿದ್ದಾರೆ.
ಐದು ಸಾವಿರ ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯನವರು ಒಪ್ಪಿಗೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಸೇವೆ ಖಾಯಂ ಅವರ ಪ್ರಮುಖ ಬೇಡಿಕೆ ಆಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ವರ್ಕ್‌ಲೋಡ್ ಬಗ್ಗೆಯೂ ಸೂಚನೆ ನೀಡಲಾಗಿದೆ. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನ ಮಾಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ನೀಡಲಾಗುವುದು. ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುತ್ತೇವೆ. ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಇವರಿಗೆ ಕೃಪಾಂಕ ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದರು.
ಅತಿಥಿ ಉಪನ್ಯಾಸಕರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ನಿರ್ಧರಿಸಲಾಗಿದೆ. ಅತಿಥಿ ಉಪನ್ಯಾಸಕರು ಮುಷ್ಕರ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಈಗಾಗಲೇ ಮುಷ್ಕರದಿಂದ ತೊಂದರೆಯಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.